*ಸ್ವಯಂಘೋಷಿತ ಅಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ.*
*ಕನಕಗಿರಿ :*5
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಹೆಸರಿನಲ್ಲಿ ಸ್ವಯಂಘೋಷಿತ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಬಂಗ್ಲೆ ಮಲ್ಲಿಕಾರ್ಜುನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಸಂಘದ ಕನಕಗಿರಿ ತಾಲೂಕು ಘಟಕದ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 95 ವರ್ಷಗಳ ಇತಿಹಾಸ ಹೊಂದಿದ್ದು, ದೇಶದ ಪ್ರಮುಖ ಪತ್ರಕರ್ತರ ಸಂಘಟನೆಗಳಲ್ಲಿ ಒಂದಾಗಿದೆ. ಸಂಘದ ಚುನಾಯಿತ ಅಧ್ಯಕ್ಷರಾದ ಶಿವಾನಂದ ತಗಡೂರ ಅವರ ವಿರುದ್ಧ ಬಂಗ್ಲೆ ಮಲ್ಲಿಕಾರ್ಜುನ್ ಅವರು ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದು, ಅವರನ್ನು ಸಂಘಟನೆ ಅಧಿಕೃತವಾಗಿ ಗುರುತಿಸಿಲ್ಲ ಎಂದು ತಿಳಿಸಲಾಗಿದೆ.
ಈ ಹಿಂದೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರೂ, ಮತ್ತೆ ಪತ್ರಕರ್ತರ ಸಂಘಟನೆಯ ಹೆಸರನ್ನು ಬಳಸಿಕೊಂಡು ಹಣ ವಸೂಲಿ ಹಾಗೂ ಸಂಘಟನೆಗೆ ಧಕ್ಕೆ ತರುವಂತಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಅಲ್ಲದೇ, ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಗ್ಲೆ ಮಲ್ಲಿಕಾರ್ಜುನ್ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಸಮಗ್ರ ತನಿಖೆ ನಡೆಸಿ, ಪತ್ರಕರ್ತರ ಸಂಘಟನೆ ಹಾಗೂ ಅದರ ಪದಾಧಿಕಾರಿಗಳ ತೇಜೋವಧೆ ಮಾಡುವ ಉದ್ದೇಶಪೂರ್ವಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಲಾಗಿದೆ.
ಸಂಘದ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವ ಹಾಗೂ ಸಂಘದ ಘನತೆಗೆ ಧಕ್ಕೆ ತರುವ ಆರೋಪಗಳ ಕುರಿತು ಕಾನೂನುಬದ್ಧವಾಗಿ ಪರಿಶೀಲಿಸಿ, ತಪ್ಪಿತಸ್ಥರೆಂದು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿದಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕನಕಗಿರಿ ತಾಲೂಕು ಅಧ್ಯಕ್ಷ ಸೋಮಶೇಖರಯ್ಯ ಸ್ವಾಮಿ ಹಿರೇಮಠ , ಉಪಾಧ್ಯಕ್ಷ ಗೌತಮ್ ಯಾದವ, ಮಹಾಂತೇಶ ಕಲಕೇರಿ, ಪ್ರಧಾನ ಕಾರ್ಯದರ್ಶಿ ಪ್ರಲ್ಹಾದ ರೆಡ್ಡಿ, ಸಹ ಕಾರ್ಯದರ್ಶಿ ಹೊನ್ನೂರು ಹುಸೇನ ಬೇಲ್ದಾರ್, ಖಜಾಂಚಿ ಶ್ರೀನಿವಾಸ ಪೂಜಾರ, ಸದಸ್ಯರಾದ ಮಧುಸೂದನ ರೆಡ್ಡಿ, ಶೇಖರಸಿಂಗ್ ರಜಪೂತ, ಶರಣಪ್ಪ ಮಹಿಪತಿ, ಅಯ್ಯಪ್ಪ ಕಮ್ಮಾರ ಉಪಸ್ಥಿತರಿದ್ದರು.
