*ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ*
*ಜಿಲ್ಲಾಧಿಕಾರಿ ಬಾರದ ಹಿನ್ನೆಲೆ: ಉಪವಿಭಾಗಾಧಿಕಾರಿ ಮೂಲಕ ಮನವಿ ಸ್ವೀಕಾರ; ರಾತ್ರಿ 10ಕ್ಕೆ ಉಪವಾಸ ಸತ್ಯಾಗ್ರಹ ಅಂತ್ಯ.*
*ಕನಕಗಿರಿ, ಸೆ.9-*
ರೈತರ ವಿವಿಧ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗದ್ದಿ ಅವರ ನೇತೃತ್ವದಲ್ಲಿ ಮಂಗಳವಾರ ಕನಕಗಿರಿ ತಹಸೀಲ್ದಾರ್ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಬೇಕು, ವಿವಿಧ ಇಲಾಖೆಗಳ ಮೂಲಕ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಬೇಕು ಹಾಗೂ ಹಲವು ದಿನಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘದ ವತಿಯಿಂದ ಸಲ್ಲಿಸಿದ ಮನವಿ ಪತ್ರದಲ್ಲಿ ತಾಲೂಕಿನ ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯ, ರಸ್ತೆ–ನೀರಾವರಿ ವ್ಯವಸ್ಥೆ, ವಿದ್ಯುತ್ ಪೂರೈಕೆ, ರೈತರ ಜಮೀನು ಎಪಿಎಂಸಿ ಮಾರುಕಟ್ಟೆ ಹದ್ದು ಬಸ್ತು, ಕಂಪೌಂಡ್ ಗೋಡೆ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳು ಸೇರಿದಂತೆ ಹಲವು ಬೇಡಿಕೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂಬುದು ರೈತ ಸಂಘದ ಪ್ರಮುಖ ಆಗ್ರಹವಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಖುದ್ದಾಗಿ ಆಗಮಿಸದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಉಪವಿಭಾಗಾಧಿಕಾರಿ ಮಹಿಬೂಬ್ ಜೀಲಾನ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ರೈತ ಸಂಘದ ಮುಖಂಡರಿಂದ ಮನವಿ ಪತ್ರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರೈತರ ಬೇಡಿಕೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಪರಿಶೀಲಿಸಿ, ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಭರವಸೆ ನೀಡಿದರು.
ಅಧಿಕಾರಿಗಳ ಭರವಸೆಯ ಹಿನ್ನೆಲೆಯಲ್ಲಿ ಶರಣಪ್ಪ ಗದ್ದಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ರಾತ್ರಿ 10 ಗಂಟೆಗೆ ಅಂತ್ಯಗೊಳಿಸಿ, ರೈತರ ಸಮಸ್ಯೆಗಳನ್ನು ಕೇವಲ ಮನವಿ ಸ್ವೀಕರಿಸುವುದಕ್ಕೆ ಸೀಮಿತಗೊಳಿಸದೆ, ಜಿಲ್ಲಾಡಳಿತವು ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ಮುಖಂಡರು ಎಚ್ಚರಿಕೆ ನೀಡಿದರು.
“ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕು. ಅಧಿಕಾರಿಗಳು ನೀಡಿರುವ ಭರವಸೆ ಕಾರ್ಯರೂಪಕ್ಕೆ ಬರಬೇಕು. ರೈತರ ಹಿತದೃಷ್ಟಿಯಿಂದ ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಳ್ಳಬೇಕು” ಎಂದು ಶರಣಪ್ಪ ಗದ್ದಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕ್ ಆಡಳಿತ ಅಧಿಕಾರಿ ಚಂದ್ರಶೇಖರ್ ಗಾಳಿ ಹಾಗೂ ಸಿಬ್ಬಂದಿ ಪಿಐ ವೀರಣ್ಣ ಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿಗಳಾದ ಶರಣಪ್ಪ ಗದ್ದಿ ಹಾಗೂ ರೈತ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
