October 7, 2026
IMG-20261002-WA0029

ಕನಕಗಿರಿ,ಅ.02-
ಪಟ್ಟಣದ ಶ್ರೀ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 157ನೇ ಹಾಗೂ ಭಾರತದ ದ್ವಿತೀಯ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನೋತ್ಸವವನ್ನು ಶುಕ್ರವಾರ ಅತ್ಯಂತ ಶ್ರದ್ಧೆ, ಸಡಗರ ಹಾಗೂ ಗೌರವದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಭಜರಂಗಬಲಿ ಅವರು, ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಇಬ್ಬರೂ ಮಹಾನ್ ನಾಯಕರ ದೇಶಸೇವೆ ಹಾಗೂ ತ್ಯಾಗ-ಬಲಿದಾನಗಳನ್ನು ಸ್ಮರಿಸಿದ ಅವರು, ದೇಶಕ್ಕೆ ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಅಹಿಂಸಾ ಮಾರ್ಗ ಹಾಗೂ ದೇಶದ ಕಷ್ಟದ ಕಾಲದಲ್ಲಿ ಗಡಿಯನ್ನು ಕಾಯುವ ಯೋಧರಿಗೆ ಮತ್ತು ಅನ್ನ ನೀಡುವ ರೈತರಿಗೆ ಧೈರ್ಯ ತುಂಬಿದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಸರಳತೆ ಹಾಗೂ ‘ಜೈ ಜವಾನ್, ಜೈ ಕಿಸಾನ್’ ಮಂತ್ರಗಳು ಇಂದಿಗೂ ಇಡೀ ಜಗತ್ತಿಗೆ ಮಾದರಿಯಾಗಿವೆ. ಇಂದಿನ ಯುವ ಪೀಳಿಗೆ ಮತ್ತು ವಿದ್ಯಾರ್ಥಿಗಳು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಈ ಮಹಾನ್ ನಾಯಕರ ಆದರ್ಶಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸಂಗಮೇಶ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸರ್ವಮಂಗಳಮ್ಮ.ಟಿ.ಆರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ರಕ್ಷಿತ್.ಎ, ತಾಲೂಕು ಅತಿಥಿ ಉಪನ್ಯಾಸಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕಂಚಿ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *