ಗಂಗಾವತಿ: ಸಾರ್ವಜನಿಕರ ರುದ್ರಭೂಮಿ ಸ್ವಚ್ಛತೆ ಕುರಿತು ದಲಿತ ಸೇನಾ ಸಂಘಟನೆ ಧ್ವನಿ ಎತ್ತಿದ ಬೆನ್ನಲ್ಲೇ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಆಡಳಿತ ಸ್ಪಂದಿಸಿ ಸ್ವಚ್ಛತಾ ಕಾರ್ಯ ಕೈಗೊಂಡಿದೆ.
ಇತ್ತೀಚೆಗೆ ಗಂಗಾವತಿ ನಗರದಲ್ಲಿ ನಡೆದ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕರ ರುದ್ರಭೂಮಿಯನ್ನು ಸ್ವಚ್ಛಗೊಳಿಸುವಂತೆ ದಲಿತ ಸೇನಾ ಸಂಘಟನೆಯ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ರುದ್ರಭೂಮಿಯಲ್ಲಿ ಸ್ವಚ್ಛತೆ ಕಾಪಾಡುವುದು ಅಗತ್ಯವಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸ್ಥಳವನ್ನು ಸ್ವಚ್ಛಗೊಳಿಸಿ ನಿರ್ವಹಣೆ ಮಾಡಬೇಕು ಎಂದು ಸಂಘಟನೆ ಮನವಿಯಲ್ಲಿ ಒತ್ತಾಯಿಸಿತ್ತು.
ಈ ಮನವಿಯನ್ನು ಗಮನಿಸಿದ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರು ತ್ವರಿತವಾಗಿ ಕ್ರಮ ಕೈಗೊಂಡಿದ್ದು, ಪಂಚಾಯಿತಿ ಸಿಬ್ಬಂದಿಯ ಮೂಲಕ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ.
ರುದ್ರಭೂಮಿ ಆವರಣದಲ್ಲಿದ್ದ ಕಸ, ಗಿಡಗಂಟಿ ಹಾಗೂ ಇತರೆ ತ್ಯಾಜ್ಯವನ್ನು ತೆರವುಗೊಳಿಸಿ ಸ್ಥಳವನ್ನು ಸ್ವಚ್ಛಗೊಳಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಿದ್ದು, ಪಂಚಾಯಿತಿ ಕ್ರಮಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮನವಿಗೆ ಸ್ಪಂದಿಸಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಂದಾದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ದಲಿತ ಸೇನಾ ತಾಲೂಕು ಅಧ್ಯಕ್ಷ ಮಂಜುನಾಥ ಧನ್ಯವಾದ ಸಲ್ಲಿಸಿದರು.
ದಲಿತ ಸೇನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮಾತನಾಡಿ, ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಂಘಟನೆ ಮುಂದುವರಿಯಲಿದೆ ಎಂದು ತಿಳಿಸಿದರು.
ರುದ್ರಭೂಮಿಯ ಸ್ವಚ್ಛತೆಯನ್ನು ಮುಂದುವರಿಸಿಕೊಂಡು ಹೋಗುವುದರ ಜತೆಗೆ, ಸಾರ್ವಜನಿಕ ಬಳಕೆಯ ಸ್ಥಳಗಳ ನಿರ್ವಹಣೆಯಲ್ಲಿಯೂ ಪಂಚಾಯಿತಿ ಆಡಳಿತ ಗಮನಹರಿಸಬೇಕು ಎಂದು ಸಂಘಟನೆಯ ಮುಖಂಡರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದಲಿತ ಸೇನಾ ಸಂಘಟನೆಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
